ಗಾಂಜಾ ಸೇವನೆ ದೃಢ: ಯುವಕನ ವಿರುದ್ಧ ಪ್ರಕರಣ ದಾಖಲು
ಆಪ್ತ ನ್ಯೂಸ್ ಸಿದ್ದಾಪುರ:
ಮಾದಕ ವಸ್ತುಗಳ ವಿರುದ್ಧ ಜಿಲ್ಲೆಯಲ್ಲಿ ಪೊಲೀಸ್ ಇಲಾಖೆ ನಡೆಸುತ್ತಿರುವ ಕಟ್ಟುನಿಟ್ಟಿನ ಕಾರ್ಯಾಚರಣೆಯ ಭಾಗವಾಗಿ, ಗಾಂಜಾ ಸೇವನೆ ಮಾಡಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟ ಹಿನ್ನೆಲೆಯಲ್ಲಿ ಯುವಕನೊಬ್ಬನ ವಿರುದ್ಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪೊಲೀಸ್ ಮಾಹಿತಿಯ ಪ್ರಕಾರ, ಶಿರಸಿ ತಾಲೂಕಿನ ಹಂಚಿನಕೆರೆ ನಿವಾಸಿ ಮಹ್ಮದ್ ಆಸಿಫ್ (26) ಎಂಬಾತ ಸಿದ್ದಾಪುರ ಪಟ್ಟಣದ ಎಂ.ಜಿ.ಸಿ ಕಾಲೇಜು ಸಮೀಪ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ವೇಳೆ ಪೊಲೀಸರ ಗಮನಕ್ಕೆ ಬಂದಿದ್ದಾನೆ. ಆತನ ವರ್ತನೆ ಅನುಮಾನಾಸ್ಪದವಾಗಿದ್ದರಿಂದ ವಶಕ್ಕೆ ಪಡೆದು ಹೆಚ್ಚಿನ ಪರಿಶೀಲನೆ ನಡೆಸಲಾಗಿದೆ.
ಬಳಿಕ ಆತನನ್ನು ಸಿದ್ದಾಪುರ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಪರೀಕ್ಷೆಯಲ್ಲಿ ಗಾಂಜಾ ಮಾದಕ ವಸ್ತು ಸೇವಿಸಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಆತನ ವಿರುದ್ಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.
ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. (ಐಪಿಎಸ್), ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಿ. ಕೃಷ್ಣಮೂರ್ತಿ, ಶಿರಸಿ ಉಪವಿಭಾಗದ ಡಿಎಸ್‌ಪಿ ಗೀತಾ ಪಾಟೀಲ್, ಪೊಲೀಸ್ ನಿರೀಕ್ಷಕ ಸೀತಾರಾಮ ಜೆ.ಬಿ. ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ.
ಸಿದ್ದಾಪುರ ಪೊಲೀಸ್ ಠಾಣೆಯ ತನಿಖಾ ವಿಭಾಗದ ಪಿಎಸ್‌ಐ ನಾಗಪ್ಪ ಬಿ. ಅವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ರಮೇಶ್ ಕೂಡಲ, ಸುನೀಲ್ ಲಮಾಣಿ, ರಾಘವೇಂದ್ರ ನಾಯ್ಕ, ಶಶಿ ನಾಯ್ಕ, ವಿನಾಯಕಗೌಡ ಹಾಗೂ ವಿರೇಶ ಚಲವಾದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಜಿಲ್ಲೆಯಲ್ಲಿ ಗಾಂಜಾ ಸೇರಿದಂತೆ ವಿವಿಧ ಮಾದಕ ವಸ್ತುಗಳ ಬಳಕೆ ಮತ್ತು ಸಾಗಾಟದ ವಿರುದ್ಧ ಪೊಲೀಸ್ ಇಲಾಖೆ ನಿರಂತರ ಕಾರ್ಯಾಚರಣೆ ನಡೆಸುತ್ತಿದ್ದು, ಇಂತಹ ಚಟುವಟಿಕೆಗಳಲ್ಲಿ ತೊಡಗುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0



