ಅಂಕೋಲಾದಲ್ಲಿ ಹೆದ್ದಾರಿ ಪಕ್ಕದಲ್ಲೇ ಉರುಳಿದ ಗ್ಯಾಸ್ ತುಂಬಿದ ಟ್ಯಾಂಕರ್; ತಪ್ಪಿದ ಭಾರಿ ಅನಾಹುತ!
ಆಪ್ತ ನ್ಯೂಸ್ ಅಂಕೋಲಾ:
ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗ್ಯಾಸ್ ತುಂಬಿದ್ದ ಟ್ಯಾಂಕರ್‌ವೊಂದು ರಸ್ತೆ ಬದಿಗೆ ಪಲ್ಟಿಯಾದ ಘಟನೆ ಬುಧವಾರ ತಡರಾತ್ರಿ ಅಂಬೇಡ್ಕರ್ ಸರ್ಕಲ್ ಸಮೀಪ ನಡೆದಿದೆ. ಜನವಸತಿ ಪ್ರದೇಶದ ಬಳಿಯೇ ಟ್ಯಾಂಕರ್ ಪಲ್ಟಿಯಾಗಿದ್ದರೂ ಗ್ಯಾಸ್ ಸೋರಿಕೆಯಾಗದ ಕಾರಣ ಸಂಭವನೀಯ ಭಾರಿ ಅನಾಹುತವೊಂದು ತಪ್ಪಿದೆ.
ಮಂಗಳೂರಿನಿಂದ ಹುಬ್ಬಳ್ಳಿಯತ್ತ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಅಂಕೋಲಾ ಮಾರ್ಗವಾಗಿ ತೆರಳುತ್ತಿದ್ದ ವೇಳೆ ಧಾರಾಕಾರ ಮಳೆಯಿಂದಾಗಿ ರಸ್ತೆ ಸರಿಯಾಗಿ ಗೋಚರಿಸದೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾಗಿದೆ ಎನ್ನಲಾಗಿದೆ.
ಗ್ಯಾಸ್ ತುಂಬಿದ ಟ್ಯಾಂಕರ್ ಜನವಸತಿ ಪ್ರದೇಶದ ಸಮೀಪವೇ ಪಲ್ಟಿಯಾಗಿರುವ ಸುದ್ದಿ ಹರಡುತ್ತಿದ್ದಂತೆ ಸ್ಥಳೀಯರಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಆದರೆ, ಟ್ಯಾಂಕರ್‌ನಿಂದ ಯಾವುದೇ ರೀತಿಯ ಗ್ಯಾಸ್ ಸೋರಿಕೆ ಕಂಡುಬರದಿರುವುದು ದೊಡ್ಡ ಅಪಾಯವನ್ನು ತಪ್ಪಿಸಿದಂತಾಗಿದೆ. ಘಟನೆಯಲ್ಲಿ ಚಾಲಕ ಸುರಕ್ಷಿತವಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಘಟನೆಯ ಮಾಹಿತಿ ಲಭ್ಯವಾಗುತ್ತಿದ್ದಂತೆ ಅಂಕೋಲಾ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿದರು. ಸ್ಥಳ ಪರಿಶೀಲನೆ ನಡೆಸಿದ ಸಿಬ್ಬಂದಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಟ್ಯಾಂಕರ್ ತೆರವು ಕಾರ್ಯಾಚರಣೆ ಆರಂಭಿಸಿದರು.
ಕ್ರೇನ್‌ಗಳ ನೆರವಿನಿಂದ ಪಲ್ಟಿಯಾಗಿದ್ದ ಟ್ಯಾಂಕರ್‌ನ್ನು ರಸ್ತೆಯಿಂದ ತೆರವುಗೊಳಿಸಲಾಗಿದ್ದು, ಪೊಲೀಸ್ ಹಾಗೂ ಅಗ್ನಿಶಾಮಕ ಸಿಬ್ಬಂದಿ ತಡರಾತ್ರಿ ಸುಮಾರು 3.30ರವರೆಗೆ ಕಾರ್ಯಾಚರಣೆ ನಡೆಸಿದರು. ಮುನ್ನೆಚ್ಚರಿಕೆಯಾಗಿ ಸ್ಥಳದಲ್ಲಿ ಅಗತ್ಯ ಭದ್ರತಾ ಕ್ರಮಗಳನ್ನು ಕೈಗೊಂಡು ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ತೊಂದರೆಯಾಗದಂತೆ ವ್ಯವಸ್ಥೆ ಮಾಡಲಾಯಿತು.
ಸ್ಥಳೀಯರು ಸಮಯಪ್ರಜ್ಞೆಯಿಂದ ಘಟನೆಯ ಬಗ್ಗೆ ಸಂಬಂಧಿಸಿದ ಇಲಾಖೆಗೆ ಮಾಹಿತಿ ನೀಡಿದ್ದು, ತೆರವು ಕಾರ್ಯಾಚರಣೆಗೆ ಸಹಕರಿಸಿದರು. ಪೊಲೀಸ್ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಯ ಕ್ಷಿಪ್ರ ಕಾರ್ಯಾಚರಣೆಗೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿದ ಅಂಕೋಲಾ ಪೊಲೀಸರು ಪರಿಶೀಲನೆ ನಡೆಸಿದ್ದು, ಘಟನೆಗೆ ಸಂಬಂಧಿಸಿದಂತೆ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0