ಹಳಿಯಾಳ ನಾಡಬಾಂಬ್ ಸ್ಫೋಟ ಪ್ರಕರಣ ಭೇದಿಸಿದ ಪೊಲೀಸರು; ಹುಬ್ಬಳ್ಳಿಯಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ಆಪ್ತ ನ್ಯೂಸ್ ಹಳಿಯಾಳ:
ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ಸಂಭವಿಸಿದ್ದ ನಾಡಬಾಂಬ್ (ಸ್ಫೋಟಕ ವಸ್ತು) ಸ್ಫೋಟ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ತಲೆಮರೆಸಿಕೊಂಡಿದ್ದ ಆರೋಪಿಯನ್ನು ಹುಬ್ಬಳ್ಳಿಯಲ್ಲಿ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಜೂನ್ 22, 2026ರಂದು ಕಾಳಗಿನಕೊಪ್ಪ ಗ್ರಾಮದ ನಿವಾಸಿ ವಸಂತ @ ವಾಸು ರಾಯಪ್ಪ ಕೊರವರ ಎಂಬಾತ ತನ್ನ ಮನೆಯಲ್ಲಿ ಅಕ್ರಮವಾಗಿ ನಾಡಬಾಂಬ್‌ಗಳನ್ನು ಸಂಗ್ರಹಿಸಿಟ್ಟಿದ್ದ ವೇಳೆ ಬೆಳಿಗ್ಗೆ ಸುಮಾರು 5.10 ಗಂಟೆಗೆ ಭಾರೀ ಸ್ಫೋಟ ಸಂಭವಿಸಿತ್ತು.
ಸ್ಫೋಟದ ತೀವ್ರತೆಗೆ ಮನೆಯ ಮೇಲ್ಚಾವಣಿ ಹಾನಿಗೊಳಗಾಗಿದ್ದು, ಅಡುಗೆಮನೆಯ ಕಿಟಕಿಯ ಗಾಜುಗಳು ಪುಡಿಪುಡಿಯಾಗಿದ್ದವು. ಅಲ್ಲದೆ, ಸುತ್ತಮುತ್ತಲಿನ ಮನೆಗಳ ಹಂಚು ಹಾಗೂ ಬಾಗಿಲುಗಳಿಗೂ ಹಾನಿಯಾಗಿದ್ದು, ಒಟ್ಟು ಸುಮಾರು ₹1.15 ಲಕ್ಷ ಮೌಲ್ಯದ ಆಸ್ತಿ ನಷ್ಟ ಸಂಭವಿಸಿದೆ.
ವಿಶೇಷ ತಂಡ ರಚಿಸಿ ಕಾರ್ಯಾಚರಣೆ
ಘಟನೆ ಸಂಬಂಧ ಹಳಿಯಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಜಿಲ್ಲಾ ಪೊಲೀಸ್ ಅಧೀಕ್ಷಕ ದೀಪನ್ ಎಂ.ಎನ್., ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ ಹಾಗೂ ದಾಂಡೇಲಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಶಿವಾನಂದ ಮದರಖಂಡಿ ಅವರ ಮಾರ್ಗದರ್ಶನದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಿದ್ದರು.
ಹಳಿಯಾಳ ಸಿಪಿಐ ಜಯಪಾಲ ಪಾಟೀಲ ನೇತೃತ್ವದಲ್ಲಿ ವಿವಿಧ ಪೊಲೀಸ್ ಠಾಣೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಆರೋಪಿಯ ಪತ್ತೆಗೆ ವ್ಯಾಪಕ ಶೋಧ ಕಾರ್ಯಾಚರಣೆ ನಡೆಸಿದರು.
ತಾಂತ್ರಿಕ ಮಾಹಿತಿ ಆಧರಿಸಿ ಬಂಧನ
ತಾಂತ್ರಿಕ ಮಾಹಿತಿಯ ಆಧಾರದಲ್ಲಿ ಆರೋಪಿಯ ಸುಳಿವು ಪತ್ತೆಹಚ್ಚಿದ ಪೊಲೀಸರು, ಜೂನ್ 24, 2026ರಂದು ಹುಬ್ಬಳ್ಳಿಯ ತಾರಿಹಾಳ ಗ್ರಾಮದ ಬಸ್ ನಿಲ್ದಾಣದ ಸಮೀಪ ಆರೋಪಿಯನ್ನು ವಶಕ್ಕೆ ಪಡೆದರು.
ಬಳಿಕ ಕಾನೂನುಬದ್ಧ ಬಂಧನ ಪ್ರಕ್ರಿಯೆ ಪೂರ್ಣಗೊಳಿಸಿ ಹಳಿಯಾಳದ ಸಿ.ಜೆ. ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ತನಿಖೆ ಮುಂದುವರಿಕೆ
ಪ್ರಕರಣದ ತನಿಖೆ ಇನ್ನೂ ಮುಂದುವರಿದಿದ್ದು, ಪ್ರಕರಣವನ್ನು ಶೀಘ್ರ ಭೇದಿಸಿ ಆರೋಪಿಯನ್ನು ಬಂಧಿಸುವಲ್ಲಿ ಉತ್ತಮ ಕಾರ್ಯನಿರ್ವಹಣೆ ತೋರಿದ ಎಲ್ಲಾ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ಅಭಿನಂದಿಸಿದೆ.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0



