ಶಿರಸಿಯಲ್ಲಿ ಅಕ್ರಮ ಸಾರಾಯಿ, ಗಾಂಜಾ ಹಾಗೂ ಡ್ರಗ್ಸ್ ವಿರುದ್ಧ ಜೂನ್ 16ರಂದು ಪ್ರತಿಭಟನೆ
ಆಪ್ತ ನ್ಯೂಸ್ ಶಿರಸಿ:
ಶಿರಸಿ-ಸಿದ್ದಾಪುರ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಅಕ್ರಮ ಸಾರಾಯಿ ಮಾರಾಟ ಹಾಗೂ ಮಾದಕ ವಸ್ತುಗಳ ಹಾವಳಿ ಹೆಚ್ಚುತ್ತಿರುವುದನ್ನು ಖಂಡಿಸಿ ಜೂನ್ 16ರಂದು ಶಿರಸಿಯಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ.
ಅನಂತ ಮೂರ್ತಿ ಹೆಗಡೆ ಚಾರಿಟೇಬಲ್ ಟ್ರಸ್ಟ್, ಸಾರ್ವಜನಿಕರು ಹಾಗೂ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ನಡೆಯಲಿರುವ ಈ ಪ್ರತಿಭಟನೆ ಬೆಳಿಗ್ಗೆ 11 ಗಂಟೆಗೆ ಶಿರಸಿ ಸಹಾಯಕ ಆಯುಕ್ತರ ಕಚೇರಿ ಎದುರು ನಡೆಯಲಿದ್ದು, ಬಳಿಕ ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಲಾಗುವುದು.
ಪ್ರತಿಭಟನೆ ಆಯೋಜಕರು ನೀಡಿರುವ ಮಾಹಿತಿಯ ಪ್ರಕಾರ, ಕ್ಷೇತ್ರದ ಬಹುತೇಕ ಗ್ರಾಮಗಳಲ್ಲಿ ಅಕ್ರಮ ಸಾರಾಯಿ ಸೇವನೆಯಿಂದ ರೈತರು, ಕೂಲಿಕಾರರು ಹಾಗೂ ಬಡ ವರ್ಗದ ಜನರು ಆರೋಗ್ಯ ಸಮಸ್ಯೆಗಳಿಗೆ ತುತ್ತಾಗುತ್ತಿದ್ದಾರೆ. ಅನೇಕರು ಕಿಡ್ನಿ ಹಾಗೂ ಲಿವರ್ ಸಂಬಂಧಿತ ಕಾಯಿಲೆಗಳಿಂದ ಬಳಲುತ್ತಿದ್ದು, ಕೆಲವರು ಸಾವನ್ನಪ್ಪಿರುವ ಘಟನೆಗಳೂ ವರದಿಯಾಗಿವೆ ಎಂದು ಅವರು ಆರೋಪಿಸಿದ್ದಾರೆ.
ಇದೇ ವೇಳೆ, ಇತ್ತೀಚಿನ ದಿನಗಳಲ್ಲಿ ಗಾಂಜಾ ಹಾಗೂ ಡ್ರಗ್ಸ್ ಸೇವನೆ ಮತ್ತು ಮಾರಾಟದ ಪ್ರಕರಣಗಳು ಹೆಚ್ಚಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಶಾಲೆ ಹಾಗೂ ಕಾಲೇಜುಗಳ ಸಮೀಪದಲ್ಲಿಯೂ ಮಾದಕ ವಸ್ತುಗಳ ಹಾವಳಿ ಹೆಚ್ಚಾಗಿದ್ದು, ವಿದ್ಯಾರ್ಥಿಗಳು ಇದರ ಬಲೆಗೆ ಬೀಳುತ್ತಿರುವುದರಿಂದ ಪಾಲಕರಲ್ಲಿ ತೀವ್ರ ಕಳವಳ ಮೂಡಿಸಿದೆ ಎಂದು ಸಂಘಟನೆಗಳು ತಿಳಿಸಿವೆ.
ಕಳೆದ ಎರಡು ವರ್ಷಗಳಿಂದ ಕ್ಷೇತ್ರದಲ್ಲಿ ಅಕ್ರಮ ಸಾರಾಯಿ, ಗಾಂಜಾ ಹಾಗೂ ಡ್ರಗ್ಸ್ ಸೇರಿದಂತೆ ವಿವಿಧ ಅನೈತಿಕ ಚಟುವಟಿಕೆಗಳು ಹೆಚ್ಚುತ್ತಿದ್ದು, ಇವುಗಳನ್ನು ತಕ್ಷಣ ನಿಯಂತ್ರಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.
ಪ್ರತಿಭಟನೆಯಲ್ಲಿ ಸಾರ್ವಜನಿಕರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಸಮಾಜಮುಖಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಹೋರಾಟಕ್ಕೆ ಬೆಂಬಲ ನೀಡುವಂತೆ ಆಯೋಜಕರು ಮನವಿ ಮಾಡಿದ್ದಾರೆ.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0



