ಎಸ್ಐಆರ್ ಬಗ್ಗೆ ಕಾಂಗ್ರೆಸ್‌ಗೆ ಹೆದರಿಕೆ ಏಕೆ? : ಸದಾನಂದ ಭಟ್ ಪ್ರಶ್ನೆ | ಎಸ್‌ಐಆರ್ ಹೆಸರಿನಲ್ಲಿ ಮತದಾರರ ಹಕ್ಕು ಕಸಿಯುವ ಪ್ರಯತ್ನ ಖಂಡನೀಯ: ಪ್ರಸನ್ನ ಶೆಟ್ಟಿ
ಆಪ್ತ ನ್ಯೂಸ್ ಶಿರಸಿ:
ವಿಶೇಷ ತೀವ್ರ ಪರಿಷ್ಕರಣೆ (Special Intensive Revision - SIR) ಪ್ರಕ್ರಿಯೆ ಕುರಿತು ಕಾಂಗ್ರೆಸ್ ನಾಯಕರು ಜನರಲ್ಲಿ ತಪ್ಪು ಕಲ್ಪನೆ ಮೂಡಿಸುತ್ತಿದ್ದು, ಚುನಾವಣಾ ಆಯೋಗದ ಸಂವಿಧಾನಬದ್ಧ ಕಾರ್ಯವನ್ನು ರಾಜಕೀಯಗೊಳಿಸುವ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಬಿಜೆಪಿ ಜಿಲ್ಲಾ ಮಾಧ್ಯಮ ವಕ್ತಾರ ಸದಾನಂದ ಭಟ್ ಆರೋಪಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಸುಮಾರು 24 ವರ್ಷಗಳ ಬಳಿಕ ದೇಶಾದ್ಯಂತ ಅರ್ಹ ಮತದಾರರ ಪಟ್ಟಿಯನ್ನು ಸಮಗ್ರವಾಗಿ ಪರಿಷ್ಕರಿಸುವ ಉದ್ದೇಶದಿಂದ ಚುನಾವಣಾ ಆಯೋಗ ಎಸ್‌ಐಆರ್ ಪ್ರಕ್ರಿಯೆಯನ್ನು ಕೈಗೊಂಡಿದೆ ಎಂದು ತಿಳಿಸಿದ್ದಾರೆ. ಇದು ಸಂಪೂರ್ಣವಾಗಿ ಚುನಾವಣಾ ಆಯೋಗದ ಅಧಿಕಾರ ವ್ಯಾಪ್ತಿಯಲ್ಲಿರುವ ಸಂವಿಧಾನಬದ್ಧ ಪ್ರಕ್ರಿಯೆಯಾಗಿದ್ದು, ಇದರ ಬಗ್ಗೆ ಜನರಿಗೆ ತಪ್ಪು ಮಾಹಿತಿ ನೀಡುವುದು ಅಥವಾ ರಾಜಕೀಯ ಲಾಭಕ್ಕಾಗಿ ಗೊಂದಲ ಸೃಷ್ಟಿಸುವುದು ಸರಿಯಲ್ಲ ಎಂದು ಅವರು ಹೇಳಿದ್ದಾರೆ.
ಸುಪ್ರೀಂ ಕೋರ್ಟ್‌ನಿಂದಲೂ ಅನುಮೋದನೆ
ಎಸ್‌ಐಆರ್ ಪ್ರಕ್ರಿಯೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕೂಡ ಅವಕಾಶ ಕಲ್ಪಿಸಿರುವ ಹಿನ್ನೆಲೆಯಲ್ಲಿ, ಈ ವಿಚಾರವನ್ನು ವಿವಾದದ ರೂಪಕ್ಕೆ ತರುವುದು ಸಮಂಜಸವಲ್ಲ ಎಂದು ಸದಾನಂದ ಭಟ್ ಅಭಿಪ್ರಾಯಪಟ್ಟಿದ್ದಾರೆ.
ಮಂಕಾಳ ವೈದ್ಯ ಹೇಳಿಕೆಗೆ ಆಕ್ಷೇಪ
ಮಾಜಿ ಸಚಿವ ಹಾಗೂ ಶಾಸಕ ಮಂಕಾಳ ವೈದ್ಯ ಅವರು, ಎಸ್‌ಐಆರ್ ಪ್ರಕ್ರಿಯೆಯನ್ನು ಬಳಸಿಕೊಂಡು ಬಿಜೆಪಿ ಜನರಿಗೆ ತೊಂದರೆ ನೀಡುತ್ತಿದೆ ಎಂದು ಆರೋಪಿಸಿರುವುದು ಸತ್ಯಕ್ಕೆ ದೂರವಾಗಿದೆ ಎಂದು ಭಟ್ ಹೇಳಿದ್ದಾರೆ.
ಅದೇ ರೀತಿ ಶಾಸಕ ಭೀಮಣ್ಣ ನಾಯ್ಕ ಅವರು ಎಸ್‌ಐಆರ್ ಮೂಲಕ ಬಿಜೆಪಿ ಮತದಾರರನ್ನು ಪಟ್ಟಿಯಿಂದ ಹೊರಗಿಡಲು ಪ್ರಯತ್ನಿಸುತ್ತಿದೆ ಎಂದು ನೀಡಿರುವ ಹೇಳಿಕೆಯೂ ಕಾಂಗ್ರೆಸ್ ನಾಯಕರಿಗೆ ಈ ಪ್ರಕ್ರಿಯೆಯ ಕುರಿತು ಇರುವ ಅರಿವನ್ನು ತೋರಿಸುತ್ತದೆ ಎಂದು ಅವರು ಟೀಕಿಸಿದ್ದಾರೆ.
ಅರ್ಹ ಮತದಾರರನ್ನು ಹೊರಗಿಡುವುದಿಲ್ಲ
ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯವನ್ನು ಭಾರತ ಚುನಾವಣಾ ಆಯೋಗ ಸಂಪೂರ್ಣ ನಿಷ್ಪಕ್ಷಪಾತವಾಗಿ ನಿರ್ವಹಿಸುತ್ತದೆ. ಎಲ್ಲಾ ಅರ್ಹ ಮತದಾರರ ಹಕ್ಕುಗಳನ್ನು ಸಂರಕ್ಷಿಸುವ ಜವಾಬ್ದಾರಿ ಆಯೋಗದ ಮೇಲಿದೆ. ಆದ್ದರಿಂದ ಯಾವುದೇ ಅರ್ಹ ಮತದಾರರನ್ನು ಉದ್ದೇಶಪೂರ್ವಕವಾಗಿ ಪಟ್ಟಿಯಿಂದ ಹೊರಗಿಡುವ ಪ್ರಶ್ನೆಯೇ ಇಲ್ಲ ಎಂದು ಸದಾನಂದ ಭಟ್ ಸ್ಪಷ್ಟಪಡಿಸಿದ್ದಾರೆ.
'ಜನರನ್ನು ಬಿಜೆಪಿ ವಿರುದ್ಧ ಎತ್ತಿಕಟ್ಟುವ ಹುನ್ನಾರ'
ಎಸ್‌ಐಆರ್ ವಿಚಾರವನ್ನು ಮುಂದಿಟ್ಟುಕೊಂಡು ಕೇಂದ್ರ ಸರ್ಕಾರ ಹಾಗೂ ಬಿಜೆಪಿ ವಿರುದ್ಧ ಜನರನ್ನು ಪ್ರಚೋದಿಸುವ ರಾಜಕೀಯ ತಂತ್ರವನ್ನು ಕಾಂಗ್ರೆಸ್ ಅನುಸರಿಸುತ್ತಿದೆ ಎಂದು ಆರೋಪಿಸಿದ ಸದಾನಂದ ಭಟ್, ಜನರು ಇಂತಹ ಆರೋಪಗಳಿಗೆ ಕಿವಿಗೊಡದೆ ವಾಸ್ತವಾಂಶಗಳನ್ನು ಅರಿತುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
******
ಮತದಾರರ ಪಟ್ಟಿ ಪರಿಷ್ಕರಣೆಗೆ ವಿರೋಧವಿಲ್ಲ; ಅರ್ಹ ಮತದಾರರಿಗೆ ಅನ್ಯಾಯವಾಗದಂತೆ ಪ್ರಕ್ರಿಯೆ ನಡೆಸಬೇಕು: ಪ್ರಸನ್ನ ಶೆಟ್ಟಿ
ಎಸ್‌ಐಆರ್ (Special Intensive Revision) ಪ್ರಕ್ರಿಯೆಯ ಹೆಸರಿನಲ್ಲಿ ಅರ್ಹ ಮತದಾರರ ಹಕ್ಕುಗಳಿಗೆ ಧಕ್ಕೆ ಉಂಟಾಗುವ ಯಾವುದೇ ಪ್ರಯತ್ನವನ್ನು ಕಾಂಗ್ರೆಸ್ ಪಕ್ಷ ತೀವ್ರವಾಗಿ ಖಂಡಿಸುತ್ತದೆ ಎಂದು ಕಾಂಗ್ರೆಸ್ ಸಾಮಾಜಿಕ ಜಾಲತಾಣ ವಿಭಾಗದ ಅಧ್ಯಕ್ಷ ಪ್ರಸನ್ನ ಶೆಟ್ಟಿ ಹೇಳಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಬಿಜೆಪಿ ನಾಯಕರು ಕಾಂಗ್ರೆಸ್ ಪಕ್ಷ ವ್ಯಕ್ತಪಡಿಸುತ್ತಿರುವ ಆತಂಕವನ್ನು ಉದ್ದೇಶಪೂರ್ವಕವಾಗಿ ತಪ್ಪಾಗಿ ಅರ್ಥೈಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಕಾಂಗ್ರೆಸ್ ಪಕ್ಷವು ಮತದಾರರ ಪಟ್ಟಿಯ ಪರಿಷ್ಕರಣೆಗೆ ವಿರೋಧಿಯಾಗಿಲ್ಲ, ಆದರೆ ಆ ಪ್ರಕ್ರಿಯೆ ಪಾರದರ್ಶಕವಾಗಿ, ನ್ಯಾಯಸಮ್ಮತವಾಗಿ ಹಾಗೂ ಯಾವುದೇ ಅರ್ಹ ನಾಗರಿಕನ ಮತದಾನದ ಹಕ್ಕಿಗೆ ಧಕ್ಕೆ ಆಗದ ರೀತಿಯಲ್ಲಿ ನಡೆಯಬೇಕು ಎಂಬುದೇ ಪಕ್ಷದ ಸ್ಪಷ್ಟ ನಿಲುವಾಗಿದೆ ಎಂದು ತಿಳಿಸಿದ್ದಾರೆ.
ಭಾರತದ ಸಂವಿಧಾನವು ಪ್ರತಿಯೊಬ್ಬ ಅರ್ಹ ನಾಗರಿಕನಿಗೂ ಮತದಾನದ ಹಕ್ಕನ್ನು ನೀಡಿದೆ. ಆದರೆ ಎಸ್‌ಐಆರ್ ಪ್ರಕ್ರಿಯೆಯಲ್ಲಿ ದಾಖಲೆಗಳ ಕೊರತೆ, ತಾಂತ್ರಿಕ ಅಡಚಣೆಗಳು ಅಥವಾ ಆಡಳಿತಾತ್ಮಕ ಕಾರಣಗಳನ್ನು ಮುಂದಿಟ್ಟುಕೊಂಡು ಬಡವರು, ಕಾರ್ಮಿಕರು, ಅಲ್ಪಸಂಖ್ಯಾತರು, ಗ್ರಾಮೀಣ ಪ್ರದೇಶದ ನಿವಾಸಿಗಳು ಹಾಗೂ ಸಮಾಜದ ದುರ್ಬಲ ವರ್ಗಗಳಿಗೆ ಸೇರಿದ ಮತದಾರರನ್ನು ಪಟ್ಟಿಯಿಂದ ಹೊರಗಿಡುವ ಸಾಧ್ಯತೆಗಳ ಬಗ್ಗೆ ದೇಶಾದ್ಯಂತ ಆತಂಕ ವ್ಯಕ್ತವಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಪ್ರಸ್ತುತ ಶಾಸಕ ಭೀಮಣ್ಣ ನಾಯ್ಕ್ ಹಾಗೂ ಮಾಜಿ ಸಚಿವ ಮಂಕಾಳ ವೈದ್ಯ ಅವರು ವ್ಯಕ್ತಪಡಿಸಿರುವ ಕಳವಳವೂ ಜನಸಾಮಾನ್ಯರಲ್ಲಿ ಮೂಡಿರುವ ಆತಂಕದ ಪ್ರತಿಬಿಂಬವಾಗಿದೆ ಎಂದು ಪ್ರಸನ್ನ ಶೆಟ್ಟಿ ಅಭಿಪ್ರಾಯಪಟ್ಟಿದ್ದಾರೆ. ಚುನಾವಣಾ ಆಯೋಗವು ಯಾವುದೇ ಅರ್ಹ ಮತದಾರರಿಗೆ ತೊಂದರೆ ಉಂಟಾಗದಂತೆ, ಸಂಪೂರ್ಣ ಪಾರದರ್ಶಕತೆ ಹಾಗೂ ವಿಶ್ವಾಸಾರ್ಹತೆಯೊಂದಿಗೆ ಎಸ್‌ಐಆರ್ ಪ್ರಕ್ರಿಯೆಯನ್ನು ನಡೆಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ರಾಜಕೀಯ ಆರೋಪ ಮಾಡುವ ಬದಲು, ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ನಾಗರಿಕನ ಮತದಾನದ ಹಕ್ಕು ಸುರಕ್ಷಿತವಾಗಿರುವುದನ್ನು ಖಚಿತಪಡಿಸಲು ಒತ್ತಾಯಿಸಬೇಕು. ಮತದಾರರ ಪಟ್ಟಿಯ ಪರಿಷ್ಕರಣೆ ಎಂಬ ನೆಪದಲ್ಲಿ ಯಾರೊಬ್ಬರ ಪ್ರಜಾಸತ್ತಾತ್ಮಕ ಹಕ್ಕೂ ಕಸಿಯಲ್ಪಡಬಾರದು ಎಂಬುದೇ ಕಾಂಗ್ರೆಸ್ ಪಕ್ಷದ ಪ್ರಮುಖ ಆಗ್ರಹವಾಗಿದೆ ಎಂದು ಅವರು ತಿಳಿಸಿದ್ದಾರೆ.
ಪ್ರಜಾಪ್ರಭುತ್ವದ ನಿಜವಾದ ಶಕ್ತಿ ಮತದಾರರ ಸಕ್ರಿಯ ಭಾಗವಹಿಸುವಿಕೆಯಲ್ಲಿ ಅಡಗಿದೆ. ಹೀಗಾಗಿ ಮತದಾರರ ಹಕ್ಕುಗಳ ರಕ್ಷಣೆಗಾಗಿ ಕಾಂಗ್ರೆಸ್ ಪಕ್ಷ ಮುಂದೆಯೂ ನಿರಂತರ ಹೋರಾಟ ನಡೆಸಲಿದೆ ಎಂದು ಪ್ರಸನ್ನ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0



