ಸಿದ್ದಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಖಂಡಿಸಿ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ; 'ಶಾಸಕರ ನಿರ್ಲಕ್ಷದಿಂದ ಆರೋಗ್ಯ ಸೇವೆ ಹದಗೆಟ್ಟಿದೆ' ಆರೋಪ

Jul 16, 2026 - 13:52
 0  46
ಸಿದ್ದಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಖಂಡಿಸಿ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ; 'ಶಾಸಕರ ನಿರ್ಲಕ್ಷದಿಂದ ಆರೋಗ್ಯ ಸೇವೆ ಹದಗೆಟ್ಟಿದೆ' ಆರೋಪ

ಆಪ್ತ ನ್ಯೂಸ್ ಸಿದ್ದಾಪುರ:

ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರು, ಔಷಧಿಗಳು ಹಾಗೂ ವೈದ್ಯಕೀಯ ಪರಿಕರಗಳ ಕೊರತೆಯನ್ನು ತಕ್ಷಣವೇ ನಿವಾರಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಬುಧವಾರ ಸಿದ್ದಾಪುರ ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಆಸ್ಪತ್ರೆಯಲ್ಲಿನ ಮೂಲಸೌಕರ್ಯಗಳ ಕೊರತೆ ಮತ್ತು ವೈದ್ಯರ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವಲ್ಲಿ ಸ್ಥಳೀಯ ಶಾಸಕರು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಬಿಜೆಪಿ ಯುವ ಮೋರ್ಚಾ ತಾಲೂಕು ಅಧ್ಯಕ್ಷ ಅಣ್ಣಪ್ಪ ನಾಯ್ಕ ಹಾಗೂ ಪ್ರಧಾನ ಕಾರ್ಯದರ್ಶಿ ಮಂಜುನಾಥ ಭಟ್ಟ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾರ್ಯಕರ್ತರು ತಾಲೂಕು ಸರ್ಕಾರಿ ಆಸ್ಪತ್ರೆಯಿಂದ ರಾಮಕೃಷ್ಣ ಹೆಗಡೆ ವೃತ್ತದವರೆಗೆ ಮೆರವಣಿಗೆ ನಡೆಸಿ ಸರ್ಕಾರ ಮತ್ತು ಶಾಸಕರ ವಿರುದ್ಧ ಘೋಷಣೆಗಳನ್ನು ಕೂಗಿದರು. ಬಳಿಕ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ರೈತ ಮೋರ್ಚಾ ಜಿಲ್ಲಾ ಅಧ್ಯಕ್ಷ ಅನಂತಮೂರ್ತಿ ಹೆಗಡೆ, "ತಾಲೂಕು ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಗಂಭೀರ ಸಮಸ್ಯೆಯಾಗಿದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಬದಲು, 'ತಿಳಿದಿರುವ ವೈದ್ಯರ ಹೆಸರನ್ನು ಕೊಡಿ, ಮೂರು ದಿನಗಳಲ್ಲಿ ನೇಮಕ ಮಾಡುತ್ತೇವೆ' ಎಂಬ ರೀತಿಯ ಹೇಳಿಕೆಗಳನ್ನು ಶಾಸಕರು ನೀಡುತ್ತಿರುವುದು ಹಾಸ್ಯಾಸ್ಪದವಾಗಿದೆ. ವೈದ್ಯಕೀಯ ಕ್ಷೇತ್ರದ ಗಂಭೀರತೆಯನ್ನು ಅರಿತು ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು" ಎಂದು ಒತ್ತಾಯಿಸಿದರು.

ಬಿಜೆಪಿ ನಿಕಟಪೂರ್ವ ಮಂಡಲ ಅಧ್ಯಕ್ಷ ಮಾರುತಿ ನಾಯ್ಕ ಹೊಸೂರು ಮಾತನಾಡಿ, "ತಾಲೂಕಿನಲ್ಲಿ ಆಡಳಿತ ವೈಫಲ್ಯ ಸ್ಪಷ್ಟವಾಗಿ ಗೋಚರಿಸುತ್ತಿದೆ. ಆಸ್ಪತ್ರೆ ಸೇರಿದಂತೆ ವಿವಿಧ ಸರ್ಕಾರಿ ಇಲಾಖೆಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ. ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿದ್ದು, ಆರೋಗ್ಯ ಕ್ಷೇತ್ರದ ನಿರ್ಲಕ್ಷ್ಯದಿಂದ ಸಾರ್ವಜನಿಕರು ಸಂಕಷ್ಟ ಅನುಭವಿಸುತ್ತಿದ್ದಾರೆ. ವೈದ್ಯರ ಕೊರತೆಯನ್ನು ಶೀಘ್ರದಲ್ಲಿ ನಿವಾರಿಸದಿದ್ದರೆ ನಮ್ಮ ಹೋರಾಟ ಇನ್ನಷ್ಟು ತೀವ್ರಗೊಳ್ಳಲಿದೆ" ಎಂದು ಎಚ್ಚರಿಕೆ ನೀಡಿದರು.

ಬಿಜೆಪಿ ಮಂಡಲ ಅಧ್ಯಕ್ಷ ತಿಮ್ಮಪ್ಪ ಎಂ.ಕೆ. ಮಾತನಾಡಿ, "ತಾಲೂಕು ಆಸ್ಪತ್ರೆಯಲ್ಲಿ ದಿನದಿಂದ ದಿನಕ್ಕೆ ವೈದ್ಯರ ಕೊರತೆ ಹೆಚ್ಚಾಗುತ್ತಿದೆ. ಇದರ ಪರಿಣಾಮ ರೋಗಿಗಳು ಸೂಕ್ತ ಚಿಕಿತ್ಸೆ ಪಡೆಯಲು ಪರದಾಡುವಂತಾಗಿದೆ. ಸರ್ಕಾರ ತಕ್ಷಣ ವೈದ್ಯರನ್ನು ನೇಮಿಸಿ ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸಬೇಕು" ಎಂದು ಆಗ್ರಹಿಸಿದರು.

ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಅಣ್ಣಪ್ಪ ನಾಯ್ಕ ಮಾತನಾಡಿ, "ಇತ್ತೀಚಿನ ದಿನಗಳಲ್ಲಿ ಶಾಸಕರ ಆಡಳಿತ ವೈಫಲ್ಯದಿಂದ ತಾಲೂಕು ಆಸ್ಪತ್ರೆಯ ಪರಿಸ್ಥಿತಿ ಸಂಪೂರ್ಣ ಹದಗೆಟ್ಟಿದೆ. ಜನಪರ ಶಾಸಕರಾಗಿರುವುದಾಗಿ ಹೇಳಿಕೊಳ್ಳುವ ಬದಲು ಜನರ ಸಮಸ್ಯೆಗಳನ್ನು ಹೆಚ್ಚಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಆಸ್ಪತ್ರೆಯಲ್ಲಿ ವೈದ್ಯರು, ಔಷಧಿಗಳು ಹಾಗೂ ಅಗತ್ಯ ವೈದ್ಯಕೀಯ ಪರಿಕರಗಳ ಕೊರತೆಯಿಂದ ಜನರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ" ಎಂದು ಆರೋಪಿಸಿದರು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಮಾಜಿ ಸದಸ್ಯ ಗುರುರಾಜ ಶಾನಭಾಗ, ಬಿಜೆಪಿ ಜಿಲ್ಲಾ ಎಸ್‌ಸಿ ಮೋರ್ಚಾ ಅಧ್ಯಕ್ಷ ನಂದನ ಬೋರ್ಕರ, ಸಿದ್ದಾಪುರ ಬಿಜೆಪಿ ಪ್ರಧಾನ ಕಾರ್ಯದರ್ಶಿ ತೋಟಪ್ಪ ನಾಯ್ಕ ಸೇರಿದಂತೆ ಹಲವರು ಮಾತನಾಡಿ ಆರೋಗ್ಯ ಕ್ಷೇತ್ರದ ಸಮಸ್ಯೆಗಳ ಕುರಿತು ಸರ್ಕಾರದ ಗಮನ ಸೆಳೆದರು.

ಪ್ರತಿಭಟನೆಯಲ್ಲಿ ಸುರೇಶ ನಾಯ್ಕ (ಬಾಲಿಕೊಪ್ಪ), ಸಂಜೀವ ನಾಯ್ಕ, ಮಹೇಶ್ ನಾಯ್ಕ, ಮಹಿಳಾ ಮೋರ್ಚಾ ಅಧ್ಯಕ್ಷೆ ಸುಜಾತ ಭಟ್ ಸೇರಿದಂತೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

ಕೊನೆಯಲ್ಲಿ ಪ್ರತಿಭಟನಾಕಾರರು ತಮ್ಮ ಬೇಡಿಕೆಗಳ ಮನವಿಯನ್ನು ತಹಶೀಲ್ದಾರ್ ಮಂಜುಳಾ ನಾಯ್ಕ ಅವರಿಗೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಮಂಜುನಾಥ ಭಟ್ಟ ಸ್ವಾಗತಿಸಿದರು, ಶರತ್ ನಾಯ್ಕ ಕಾರ್ಯಕ್ರಮ ನಿರೂಪಿಸಿದರು ಹಾಗೂ ಕೃಷ್ಣಮೂರ್ತಿ ಐಸೂರು ವಂದಿಸಿದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0