ಶಿರಸಿಯಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿಗೆ ಆಕ್ರೋಶ: ಡಿವೈಡರ್ ತೆರವುಗೊಳಿಸುವಂತೆ ಬಿಜೆಪಿ ಪ್ರತಿಭಟನೆ, ಲೋಕೋಪಯೋಗಿ ಇಲಾಖೆ ಕಚೇರಿಗೆ ಮುತ್ತಿಗೆ

Jun 23, 2026 - 21:38
 0  65
ಶಿರಸಿಯಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿಗೆ ಆಕ್ರೋಶ: ಡಿವೈಡರ್ ತೆರವುಗೊಳಿಸುವಂತೆ ಬಿಜೆಪಿ ಪ್ರತಿಭಟನೆ, ಲೋಕೋಪಯೋಗಿ ಇಲಾಖೆ ಕಚೇರಿಗೆ ಮುತ್ತಿಗೆ

ಆಪ್ತ ನ್ಯೂಸ್ ಶಿರಸಿ:

ನಗರದ ಚರ್ಚ್ ರಸ್ತೆಯಲ್ಲಿರುವ ಆವೆ ಮರಿಯಾ ಶಾಲೆಯ ಎದುರು ನಡೆದ ರಸ್ತೆ ಅಪಘಾತದಲ್ಲಿ ಆಟೋರಿಕ್ಷಾ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆಗೆ ಅವೈಜ್ಞಾನಿಕ ರಸ್ತೆ ಕಾಮಗಾರಿ ಹಾಗೂ ಡಿವೈಡರ್ ಅಳವಡಿಕೆಯೇ ನೇರ ಕಾರಣ ಎಂದು ಆರೋಪಿಸಿ ಬಿಜೆಪಿ ಶಿರಸಿ ನಗರ ಮಂಡಲದ ವತಿಯಿಂದ ಮಂಗಳವಾರ ತೀವ್ರ ಪ್ರತಿಭಟನೆ ನಡೆಸಲಾಯಿತು.

ಬಿಜೆಪಿ ಶಿರಸಿ ನಗರ ಮಂಡಲ ಅಧ್ಯಕ್ಷ ಆನಂದ ಸಾಲೇರ್ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾರ್ಯಕರ್ತರು, ಆಟೋರಿಕ್ಷಾ ಚಾಲಕರು ಹಾಗೂ ಮಾಲಕರು, ಸಾರ್ವಜನಿಕರು ಪಾಲ್ಗೊಂಡು ಲೋಕೋಪಯೋಗಿ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನಾಕಾರರು, ಚರ್ಚ್ ರಸ್ತೆಯಲ್ಲಿ ಕೈಗೊಂಡಿರುವ ರಸ್ತೆ ಕಾಮಗಾರಿ ಸಂಪೂರ್ಣ ಅವೈಜ್ಞಾನಿಕವಾಗಿದ್ದು, ಅಳವಡಿಸಿರುವ ಡಿವೈಡರ್‌ನಿಂದ ವಾಹನ ಸವಾರರಿಗೆ ತೀವ್ರ ತೊಂದರೆಯಾಗುತ್ತಿದೆ. ಇದೇ ಕಾರಣದಿಂದ ಮಾರಕ ಅಪಘಾತ ಸಂಭವಿಸಿ ಅಮಾಯಕ ಆಟೋರಿಕ್ಷಾ ಚಾಲಕ ಜೀವ ಕಳೆದುಕೊಳ್ಳಬೇಕಾಯಿತು ಎಂದು ಆರೋಪಿಸಿದರು.

ಈ ಹಿನ್ನೆಲೆಯಲ್ಲಿ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರ ಕಚೇರಿಗೆ ಮುತ್ತಿಗೆ ಹಾಕಿದ ಪ್ರತಿಭಟನಾಕಾರರು, ತಕ್ಷಣವೇ ಅವೈಜ್ಞಾನಿಕವಾಗಿ ನಿರ್ಮಿಸಿರುವ ಡಿವೈಡರ್ ತೆರವುಗೊಳಿಸಬೇಕು. ಅದು ಸಾಧ್ಯವಾಗದಿದ್ದಲ್ಲಿ ರಸ್ತೆಯನ್ನು ಅಗಲೀಕರಿಸಿ ವಾಹನ ಸಂಚಾರ ಸುಗಮವಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಇದಲ್ಲದೆ, ಮುಂದಿನ ದಿನಗಳಲ್ಲಿ ಇದೇ ಸ್ಥಳದಲ್ಲಿ ಮತ್ತಷ್ಟು ಅಪಘಾತಗಳು ಸಂಭವಿಸಿ ಅಮಾಯಕರು ಪ್ರಾಣ ಕಳೆದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗದಂತೆ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯ ಬಳಿಕ ಲೋಕೋಪಯೋಗಿ ಇಲಾಖೆಯ ಅಭಿಯಂತರರಿಗೆ ಮನವಿ ಸಲ್ಲಿಸಿದ ಪ್ರತಿಭಟನಾಕಾರರು, ಅವೈಜ್ಞಾನಿಕ ರಸ್ತೆ ಕಾಮಗಾರಿಯನ್ನು ತಕ್ಷಣ ಸರಿಪಡಿಸಬೇಕು ಹಾಗೂ ಅಪಘಾತದಲ್ಲಿ ಮೃತಪಟ್ಟ ಆಟೋರಿಕ್ಷಾ ಚಾಲಕರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಸರ್ಕಾರಕ್ಕೆ ಶಿಫಾರಸು ಮಾಡಬೇಕೆಂದು ಮನವಿ ಮಾಡಿದರು.

ಈ ಪ್ರತಿಭಟನೆಯಲ್ಲಿ ಆಟೋರಿಕ್ಷಾ ಚಾಲಕರು ಮತ್ತು ಮಾಲಕರ ಸಂಘದ ಅಧ್ಯಕ್ಷ ಹಾಗೂ ಜೆಡಿಎಸ್ ಮುಖಂಡ ಉಪೇಂದ್ರ ಪೈ, ಬಿಜೆಪಿ ಶಿವಮೊಗ್ಗ ಸಹಪ್ರಭಾರಿ ಆರ್.ಡಿ. ಹೆಗಡೆ, ಮಂಡಲ ಪ್ರಧಾನ ಕಾರ್ಯದರ್ಶಿ ನಾಗರಾಜ್ ನಾಯ್ಕ್, ಮಾಂತೇಶ ಹಾದಿಮನೆ, ನಂದನ್ ಸಾಗರ್, ಶ್ರೀಕಾಂತ ನಾಯ್ಕ್, ರಮಾಕಾಂತ್ ಭಟ್, ಶರ್ಮಿಳಾ ಮಾದನಗಿರಿ, ನರಸಿಂಹ ನಾಯ್ಕ್, ಈಶ್ವರ ಆಚಾರಿ ಸೇರಿದಂತೆ ಬಿಜೆಪಿ ಮಂಡಲ ಹಾಗೂ ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಕಾರ್ಯಕರ್ತರು, ಆಟೋರಿಕ್ಷಾ ಚಾಲಕರು, ಮಾಲಕರು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.

ಪ್ರತಿಭಟನೆಯ ಬಳಿಕ ಈ ಕುರಿತು ತಹಸೀಲ್ದಾರರು, ಪೊಲೀಸ್ ವೃತ್ತ ನಿರೀಕ್ಷಣಾಧಿಕಾರಿ ಹಾಗೂ ಡಿವೈಎಸ್ಪಿ ಗೀತಾ ಪಾಟೀಲ್ ಅವರಿಗೆ ಮಾಹಿತಿ ನೀಡಿ, ರಸ್ತೆ ಸುರಕ್ಷತೆ ದೃಷ್ಟಿಯಿಂದ ತಕ್ಷಣ ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0