ಶಿರಸಿ–ಸಿದ್ದಾಪುರ–ಯಲ್ಲಾಪುರದಲ್ಲಿ ಮಳೆ ಅಬ್ಬರ: ರಸ್ತೆಗಳ ಮೇಲೆ ಉರುಳಿದ ಮರಗಳು, ವಾಹನ ಸಂಚಾರಕ್ಕೆ ತಾತ್ಕಾಲಿಕ ಅಡಚಣೆ
ಆಪ್ತ ನ್ಯೂಸ್ ಶಿರಸಿ:
ಉತ್ತರ ಕನ್ನಡ ಜಿಲ್ಲೆಯ ಶಿರಸಿ, ಸಿದ್ದಾಪುರ, ಯಲ್ಲಾಪುರ ಭಾಗಗಳಲ್ಲಿ ಭಾನುವಾರ ಸುರಿದ ಭಾರೀ ಮಳೆಯಿಂದ ಹಲವು ಕಡೆ ಮರಗಳು ರಸ್ತೆಗೆ ಉರುಳಿಬಿದ್ದು ವಾಹನ ಸಂಚಾರಕ್ಕೆ ಕೆಲಕಾಲ ಅಡಚಣೆ ಉಂಟಾಯಿತು. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಶಿರಸಿ ನಗರದ ಹೊರವಲಯದ ಶಿರಸಿ–ಸಿದ್ದಾಪುರ ರಸ್ತೆಯಲ್ಲಿ ರಸ್ತೆ ಬದಿಯ ಮರವೊಂದು ಏಕಾಏಕಿ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಕೆಲಕಾಲ ಸ್ಥಗಿತಗೊಂಡಿತು. ನಂತರ ಸ್ಥಳೀಯರು ಹಾಗೂ ಸಂಬಂಧಪಟ್ಟ ಸಿಬ್ಬಂದಿ ಮರವನ್ನು ತೆರವುಗೊಳಿಸಿ ಸಂಚಾರವನ್ನು ಪುನಃ ಸುಗಮಗೊಳಿಸಿದರು.
ಇನ್ನೊಂದೆಡೆ ಮುಂಡಗೋಡ ತಾಲೂಕಿನ ಬೆಡಸಗಾವ್–ಮಳಗಿ ರಸ್ತೆಯ ಮಧ್ಯೆ ಬೃಹತ್ ಮರ ಉರುಳಿಬಿದ್ದಿದ್ದು, ವಾಹನ ಸಂಚಾರಕ್ಕೆ ತಾತ್ಕಾಲಿಕ ಅಡಚಣೆ ಉಂಟಾಯಿತು. ಭಾನುವಾರವಾಗಿದ್ದ ಕಾರಣ ರಸ್ತೆಯಲ್ಲಿ ವಾಹನಗಳ ಸಂಖ್ಯೆ ಕಡಿಮೆಯಿದ್ದರಿಂದ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತ ತಪ್ಪಿದೆ. ಸಾಮಾನ್ಯ ದಿನಗಳಲ್ಲಿ ಈ ರಸ್ತೆಯಲ್ಲಿ ಶಾಲಾ–ಕಾಲೇಜು ವಿದ್ಯಾರ್ಥಿಗಳು ಹಾಗೂ ವಾಹನಗಳ ಓಡಾಟ ಹೆಚ್ಚಾಗಿರುವುದರಿಂದ ಸ್ಥಳೀಯರು ಆತಂಕ ವ್ಯಕ್ತಪಡಿಸಿದರು.
ಮರ ಬಿದ್ದಿರುವ ಮಾಹಿತಿ ತಿಳಿಯುತ್ತಿದ್ದಂತೆಯೇ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಸಾರ್ವಜನಿಕರು ಸ್ಥಳಕ್ಕೆ ಧಾವಿಸಿ ಮರವನ್ನು ತೆರವುಗೊಳಿಸಿ ವಾಹನ ಸಂಚಾರವನ್ನು ಪುನಃ ಆರಂಭಿಸಿದರು.
ಇದೇ ವೇಳೆ ಯಲ್ಲಾಪುರ ತಾಲೂಕಿನ ಹಳಿಯಾಳ ಕ್ರಾಸ್ ಸಮೀಪ ಅಂಕೋಲಾ–ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲೂ ಶನಿವಾರ ಬೃಹತ್ ಮರ ಅಡ್ಡಲಾಗಿ ಉರುಳಿಬಿದ್ದ ಪರಿಣಾಮ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಬಳಿಕ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಸಿಬ್ಬಂದಿ ಮರ ತೆರವುಗೊಳಿಸಿ ಸಂಚಾರವನ್ನು ಸಾಮಾನ್ಯ ಸ್ಥಿತಿಗೆ ತಂದರು.
ಮಳೆಗಾಲದ ಹಿನ್ನೆಲೆಯಲ್ಲಿ ಗಾಳಿ ಮತ್ತು ಭಾರೀ ಮಳೆಯ ಸಂದರ್ಭಗಳಲ್ಲಿ ರಸ್ತೆ ಬದಿಯ ಮರಗಳು ಉರುಳುವ ಸಾಧ್ಯತೆ ಇರುವುದರಿಂದ ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0



