ಬಿಳೂರು ಕಾಲೇಜಿನಲ್ಲಿ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ | ‘ಪ್ರಾಂಶುಪಾಲರ ವರ್ತನೆಯಿಂದ ಬೇಸತ್ತಿದ್ದೇವೆ’ — ವರ್ಗಾವಣೆಗೆ ವಿದ್ಯಾರ್ಥಿಗಳ ಪಟ್ಟು

Sep 9, 2026 - 22:10
 0  144
ಬಿಳೂರು ಕಾಲೇಜಿನಲ್ಲಿ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ  | ‘ಪ್ರಾಂಶುಪಾಲರ ವರ್ತನೆಯಿಂದ ಬೇಸತ್ತಿದ್ದೇವೆ’ — ವರ್ಗಾವಣೆಗೆ ವಿದ್ಯಾರ್ಥಿಗಳ ಪಟ್ಟು

ಆಪ್ತ ನ್ಯೂಸ್ ಶಿರಸಿ:

ಪ್ರಾಂಶುಪಾಲರ ವರ್ತನೆಯಿಂದ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಆರೋಪಿಸಿ ತಾಲೂಕಿನ ಬಿಳೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ನೂರಾರು ವಿದ್ಯಾರ್ಥಿಗಳು ಬುಧವಾರ ದಿಢೀರ್ ಪ್ರತಿಭಟನೆ ನಡೆಸಿದರು. ತರಗತಿಗಳನ್ನು ಬಹಿಷ್ಕರಿಸಿದ ವಿದ್ಯಾರ್ಥಿಗಳು ಕಾಲೇಜು ಆವರಣದ ಮೈದಾನದಲ್ಲಿ ಕುಳಿತು ‘ಡೌನ್ ಡೌನ್ ಪ್ರಿನ್ಸಿಪಾಲ್’ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕೆಲವು ತಿಂಗಳ ಹಿಂದೆ ಬಿಳೂರು ಸರ್ಕಾರಿ ಪದವಿಪೂರ್ವ ಕಾಲೇಜಿಗೆ ವರ್ಗಾವಣೆಯಾಗಿ ಬಂದಿರುವ ಡಾ. ಪುಷ್ಪಲತಾ ಅವರು ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ವರ್ತನೆಯಿಂದ ಕಾಲೇಜಿನಲ್ಲಿ ಅಸಮಾಧಾನದ ವಾತಾವರಣ ನಿರ್ಮಾಣವಾಗಿದೆ ಎಂದು ಪ್ರತಿಭಟನಾನಿರತ ವಿದ್ಯಾರ್ಥಿಗಳು ಆರೋಪಿಸಿದರು.

ಪ್ರಾಂಶುಪಾಲರು ವಿದ್ಯಾರ್ಥಿಗಳನ್ನು ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾರೆ. ವಿದ್ಯಾರ್ಥಿಗಳ ಎದುರೇ ಪೋಷಕರೊಂದಿಗೆ ಅಗೌರವದಿಂದ ಮಾತನಾಡುತ್ತಾರೆ. ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಯೊಂದಿಗೆ ಸೂಕ್ತ ರೀತಿಯಲ್ಲಿ ನಡೆದುಕೊಳ್ಳುತ್ತಿಲ್ಲ ಎಂದು ವಿದ್ಯಾರ್ಥಿಗಳು ದೂರಿದರು. ಅಲ್ಲದೆ, ಉಪನ್ಯಾಸಕರಿಗೂ ವಿದ್ಯಾರ್ಥಿಗಳ ಎದುರೇ ದರ್ಪದಿಂದ ವರ್ತಿಸುತ್ತಾರೆ ಎಂಬ ಆರೋಪವನ್ನು ಮಾಡಿದರು.

ಉಪನ್ಯಾಸಕರಿಗೆ ಕಿರಿಕಿರಿ ಆರೋಪ

ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಉಪನ್ಯಾಸಕರಿಗೆ ಪದೇಪದೇ ಕಿರಿಕಿರಿ ನೀಡಲಾಗುತ್ತಿದೆ. ಇದರಿಂದಾಗಿ ಹಲವು ಉಪನ್ಯಾಸಕರು ಕಾಲೇಜು ತೊರೆಯುವಂತಾಗಿದೆ. ಉಪನ್ಯಾಸಕರು ಬದಲಾಗುತ್ತಿರುವುದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೂ ತೊಂದರೆಯಾಗುತ್ತಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದರು.

ಪ್ರಾಂಶುಪಾಲರ ವರ್ತನೆಯಿಂದ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆಯಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ವಿದ್ಯಾರ್ಥಿಗಳು, ಪ್ರಾಂಶುಪಾಲರನ್ನು ಕೂಡಲೇ ವರ್ಗಾವಣೆ ಮಾಡಬೇಕು ಎಂದು ಒತ್ತಾಯಿಸಿದರು. ಬೇಡಿಕೆ ಈಡೇರುವವರೆಗೂ ಕಾಲೇಜಿಗೆ ಹಾಜರಾಗುವುದಿಲ್ಲ ಎಂಬ ಎಚ್ಚರಿಕೆಯನ್ನೂ ನೀಡಿದರು.

ಪೊಲೀಸರ ಮಧ್ಯಪ್ರವೇಶ; ಪ್ರತಿಭಟನೆ ಹಿಂಪಡೆದ ವಿದ್ಯಾರ್ಥಿಗಳು

ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿರುವ ವಿಷಯ ತಿಳಿದು ಬನವಾಸಿ ಪೊಲೀಸ್ ಠಾಣೆಯ ಪಿಎಸ್‌ಐ ಮಹಾಂತಪ್ಪ ಕುಂಬಾರ ಸ್ಥಳಕ್ಕೆ ಆಗಮಿಸಿದರು. ಪ್ರತಿಭಟನೆ ನಡೆಸಲು ಪೂರ್ವಾನುಮತಿ ಪಡೆಯದಿರುವುದನ್ನು ಗಮನಕ್ಕೆ ತಂದ ಅವರು, ಪ್ರತಿಭಟಿಸುವ ಹಕ್ಕು ಎಲ್ಲರಿಗೂ ಇದೆ. ಆದರೆ ಕಾನೂನಿನ ಚೌಕಟ್ಟಿನಲ್ಲಿ ಅಗತ್ಯ ಅನುಮತಿ ಪಡೆದು ಪ್ರತಿಭಟನೆ ನಡೆಸಬೇಕು ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.

ಪಿಎಸ್‌ಐ ಅವರ ಮನವಿಯ ಬಳಿಕ ವಿದ್ಯಾರ್ಥಿಗಳು ಬುಧವಾರದ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂಪಡೆದರು. ಆದರೆ ತಮ್ಮ ಬೇಡಿಕೆ ಈಡೇರದಿದ್ದರೆ ಗುರುವಾರವೂ ಪ್ರತಿಭಟನೆ ಮುಂದುವರಿಸುವುದಾಗಿ ವಿದ್ಯಾರ್ಥಿಗಳು ಎಚ್ಚರಿಸಿದ್ದಾರೆ.

ನೂರಾರು ವಿದ್ಯಾರ್ಥಿಗಳು ಏಕಕಾಲದಲ್ಲಿ ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿರುವುದು ಬಿಳೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ಬೆಳವಣಿಗೆಯನ್ನು ಗಮನ ಸೆಳೆಯುವಂತೆ ಮಾಡಿದೆ.

ವಿದ್ಯಾರ್ಥಿಗಳು ಮಾಡಿರುವ ಆರೋಪಗಳ ಕುರಿತು ಕಾಲೇಜು ಆಡಳಿತ ಮಂಡಳಿ ಹಾಗೂ ಶಿಕ್ಷಣ ಇಲಾಖೆಯ ಅಧಿಕೃತ ಪ್ರತಿಕ್ರಿಯೆ ಲಭ್ಯವಾದ ಬಳಿಕವಷ್ಟೇ ಪ್ರಕರಣದ ಸಂಪೂರ್ಣ ಚಿತ್ರಣ ಸ್ಪಷ್ಟವಾಗಬೇಕಿದೆ.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0