ಬಳ್ಳಾರಿ ಚಲೋ ಪಾದಯಾತ್ರೆಯಲ್ಲಿ ಉತ್ತರ ಕನ್ನಡದ ಬಿಜೆಪಿ ರೈತ ಮೋರ್ಚಾ ಭಾಗಿ

Sep 3, 2026 - 13:15
 0  23
ಬಳ್ಳಾರಿ ಚಲೋ ಪಾದಯಾತ್ರೆಯಲ್ಲಿ ಉತ್ತರ ಕನ್ನಡದ ಬಿಜೆಪಿ ರೈತ ಮೋರ್ಚಾ ಭಾಗಿ

ಆಪ್ತ ನ್ಯೂಸ್ ಶಿರಸಿ/ರಾಯಚೂರು:

ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನೀತಿಗಳು ಹಾಗೂ ಆಡಳಿತ ವೈಫಲ್ಯವನ್ನು ಖಂಡಿಸಿ ಬಿಜೆಪಿ ಹಮ್ಮಿಕೊಂಡಿರುವ “ಬಳ್ಳಾರಿ ಚಲೋ” ಬೃಹತ್ ಪಾದಯಾತ್ರೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಬಿಜೆಪಿ ರೈತ ಮೋರ್ಚಾ ಪದಾಧಿಕಾರಿಗಳು ಭಾಗವಹಿಸಿದರು.

ಬಿಜೆಪಿ ರೈತ ಮೋರ್ಚಾ ಉತ್ತರ ಕನ್ನಡ ಜಿಲ್ಲಾಧ್ಯಕ್ಷ ಅನಂತಮೂರ್ತಿ ಹೆಗಡೆ ನೇತೃತ್ವದಲ್ಲಿ ಜಿಲ್ಲೆಯ ನೂರಾರು ರೈತ ಮೋರ್ಚಾ ಪದಾಧಿಕಾರಿಗಳು ಪಾದಯಾತ್ರೆಯಲ್ಲಿ ಪಾಲ್ಗೊಂಡರು.

ಬಳ್ಳಾರಿ ಚಲೋ ಪಾದಯಾತ್ರೆಯ ಅಂಗವಾಗಿ ಗುರುವಾರ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಗುಡದೂರು ಗ್ರಾಮದಿಂದ ಸಿಂಧನೂರುವರೆಗೆ ಬೃಹತ್ ಪಾದಯಾತ್ರೆ ನಡೆಯಿತು. ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಪಕ್ಷದ ಪ್ರಮುಖ ನಾಯಕರು, ಕಾರ್ಯಕರ್ತರು ಹಾಗೂ ರೈತ ಮೋರ್ಚಾ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಬಿ.ವೈ. ವಿಜಯೇಂದ್ರ, ಕರ್ನಾಟಕದಲ್ಲಿ ರೈತ ವಿರೋಧಿ ನೀತಿಗಳನ್ನು ಅನುಸರಿಸುತ್ತಿರುವ ಕಾಂಗ್ರೆಸ್ ಸರ್ಕಾರವನ್ನು ಬುಡಸಮೇತ ಕಿತ್ತೊಗೆಯಬೇಕಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುಖ್ಯಮಂತ್ರಿಯವರಿಗೆ ರಿಯಲ್ ಎಸ್ಟೇಟ್ ಕ್ಷೇತ್ರದ ಬಗ್ಗೆ ಇರುವ ಆಸಕ್ತಿ ರಾಜ್ಯದ ರೈತರು, ಮಹಿಳೆಯರು ಹಾಗೂ ಯುವಕರ ಉದ್ಯೋಗದ ಬಗ್ಗೆ ಇಲ್ಲ ಎಂದು ಆರೋಪಿಸಿದ ಅವರು, ಸರ್ಕಾರದಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಯಾವುದೇ ಅಭಿವೃದ್ಧಿ ಕಾರ್ಯಗಳಿಗೆ ಆದ್ಯತೆ ನೀಡದೆ ಲೂಟಿ ಹೊಡೆಯುವ ಕೆಲಸ ಮಾಡುತ್ತಿದೆ. ಮೂಡಾ ಹಗರಣ, ವಾಲ್ಮೀಕಿ ನಿಗಮದ ಹಣದ ಅಕ್ರಮ ಸೇರಿದಂತೆ ಹಲವು ಹಗರಣಗಳು ನಡೆದಿವೆ. ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದರೂ ಸರ್ಕಾರ ಏನು ಮಾಡುತ್ತಿದೆ ಎಂದು ಪ್ರಶ್ನಿಸಿದರು.

2028ರಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ವಿಜಯೇಂದ್ರ, ಸರ್ಕಾರದ ಬೇಜವಾಬ್ದಾರಿ ಹೇಳಿಕೆಗಳು ಹಾಗೂ ಅಭಿವೃದ್ಧಿಶೂನ್ಯ ಆಡಳಿತದಿಂದ ಜನರು ರೋಸಿ ಹೋಗಿದ್ದಾರೆ ಎಂದರು.

ಬಿಜೆಪಿ ಹೋರಾಟದ ಪರಿಣಾಮವಾಗಿ ಸರ್ಕಾರ ಎರಡನೇ ಹಂತದ ಬರ ಪರಿಹಾರ ಬಿಡುಗಡೆಗೆ ಮುಂದಾಗಿದೆ ಎಂದು ಹೇಳಿದ ಅವರು, “ಬಳ್ಳಾರಿ ಚಲೋ” ಪಾದಯಾತ್ರೆಗೆ ರಾಜ್ಯಾದ್ಯಂತ ಭರ್ಜರಿ ಜನಬೆಂಬಲ ವ್ಯಕ್ತವಾಗುತ್ತಿದೆ ಎಂದರು.

ಕಾಂಗ್ರೆಸ್ ಸರ್ಕಾರ ದಲಿತರನ್ನು ಕೇವಲ ಮತಬ್ಯಾಂಕ್‌ಗಾಗಿ ಬಳಸಿಕೊಂಡು ಅವರಿಗೆ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿದ ವಿಜಯೇಂದ್ರ, ರೈತರು ಸೇರಿದಂತೆ ವಿವಿಧ ವರ್ಗಗಳ ಜನರ ಹಿತಾಸಕ್ತಿಗೆ ವಿರುದ್ಧವಾಗಿರುವ ಸರ್ಕಾರದ ನೀತಿಗಳನ್ನು ವಿರೋಧಿಸಿ ಪಾದಯಾತ್ರೆ ನಡೆಸಲಾಗುತ್ತಿದೆ ಎಂದು ಹೇಳಿದರು.

ಪಾದಯಾತ್ರೆಯಲ್ಲಿ ಬಿಜೆಪಿ ರೈತ ಮೋರ್ಚಾದ ಪ್ರಮುಖರಾದ ಶಿವಕುಮಾರ್ ನಾಯ್ಕ್ ಕೊಂಡ್ಲಿ, ಬಸಣ್ಣ ಕುರುಬಕಟ್ಟಿ ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯ ನೂರಾರು ರೈತ ಮೋರ್ಚಾ ಪದಾಧಿಕಾರಿಗಳು ಭಾಗವಹಿಸಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0