ಕಾರವಾರ ಟ್ಯಾಗೋರ್ ಕಡಲ ತೀರದಲ್ಲಿ ಮಹಿಳೆ ಶವ ಪತ್ತೆ: ಅತ್ಯಾಚಾರ-ಹತ್ಯೆ ಶಂಕೆ
ಆಪ್ತ ನ್ಯೂಸ್ ಕಾರವಾರ:
ಕಾರವಾರ ನಗರದ ಟ್ಯಾಗೋರ್ ಕಡಲ ತೀರದಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ಭಾರೀ ಆತಂಕಕ್ಕೆ ಕಾರಣವಾಗಿದೆ. ಹಳೆ ಮೀನು ಮಾರುಕಟ್ಟೆ ಹಾಗೂ ಕಾರವಾರ ನಗರಸಭೆ ಉದ್ಯಾನದ ನಡುವಿನ ನಿರ್ಜನ ಪ್ರದೇಶದಲ್ಲಿ ಮಹಿಳೆಯ ಶವ ಪತ್ತೆಯಾಗಿದ್ದು, ಘಟನೆ ನಗರದಲ್ಲಿ ಭೀತಿ ಮೂಡಿಸಿದೆ.
ಸ್ಥಳೀಯರು ಬೆಳಗಿನ ಜಾವ ಕಡಲ ತೀರದ ಬಳಿ ಅನುಮಾನಾಸ್ಪದವಾಗಿ ಬಿದ್ದಿದ್ದ ಶವವನ್ನು ಗಮನಿಸಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಕಾರವಾರ ನಗರ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದು, ಮಹಿಳೆ ಹೊರ ರಾಜ್ಯದವಳಾಗಿರಬಹುದೆಂದು ಪ್ರಾಥಮಿಕವಾಗಿ ಶಂಕಿಸಲಾಗಿದೆ. ಮೃತಳ ಗುರುತು ಇನ್ನೂ ಪತ್ತೆಯಾಗಿಲ್ಲ.
ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಮಹಿಳೆಯನ್ನು ಅತ್ಯಾಚಾರ ಮಾಡಿ ಬಳಿಕ ಹತ್ಯೆ ಮಾಡಿರುವ ಸಾಧ್ಯತೆ ಇರುವುದಾಗಿ ಶಂಕಿಸಲಾಗಿದೆ. ಮಹಿಳೆಯ ದೇಹದ ಮೇಲೆ ಗಾಯದ ಗುರುತುಗಳು ಕಂಡುಬಂದಿದ್ದು, ದೇಹವನ್ನು ಕಟ್ಟಿಹಾಕಿ ನಂತರ ಕೊಲೆ ಮಾಡಿರಬಹುದೆಂಬ ಅನುಮಾನ ಕೂಡ ವ್ಯಕ್ತವಾಗಿದೆ. ಘಟನೆಯು ಅತ್ಯಂತ ಕ್ರೂರ ಸ್ವರೂಪದ್ದಾಗಿದ್ದು, ಸಂಪೂರ್ಣ ತನಿಖೆ ಅಗತ್ಯವಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯ ಗಂಭೀರತೆಯನ್ನು ಮನಗಂಡು, ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಕಾರವಾರದ ಕ್ರಿಮ್ಸ್ (KIMS) ಆಸ್ಪತ್ರೆಗೆ ಸಾಗಿಸಲಾಗಿದೆ. ಮರಣೋತ್ತರ ವರದಿಯ ನಂತರವೇ ಸಾವಿನ ನಿಖರ ಕಾರಣ ಹಾಗೂ ಅತ್ಯಾಚಾರ ನಡೆದಿದೆಯೇ ಎಂಬುದು ಸ್ಪಷ್ಟವಾಗಲಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
ಇನ್ನು, ಕರಾವಳಿ ಉತ್ಸವ ವೇದಿಕೆಯ ಕೆಲವೇ ಮೀಟರ್ ದೂರದಲ್ಲಿ ಶವ ಪತ್ತೆಯಾಗಿರುವುದು ಸಾರ್ವಜನಿಕ ವಲಯದಲ್ಲಿ ಭಾರಿ ಆತಂಕಕ್ಕೆ ಕಾರಣವಾಗಿದೆ. ಜನಸಂಚಾರ ಇರುವ ಪ್ರದೇಶದಲ್ಲೇ ಈ ರೀತಿ ಘಟನೆ ಸಂಭವಿಸಿರುವುದು ಭದ್ರತೆ ಕುರಿತು ಹಲವು ಪ್ರಶ್ನೆಗಳನ್ನು ಎತ್ತಿದೆ.
ಈ ಸಂಬಂಧ ಕಾರವಾರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆ. ಸುತ್ತಮುತ್ತಲಿನ ಸಿಸಿ ಟಿವಿ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದ್ದು, ಮಹಿಳೆಯ ಗುರುತು ಪತ್ತೆಗೆ ಪೊಲೀಸರು ಪ್ರಯತ್ನ ಮುಂದುವರಿಸಿದ್ದಾರೆ.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0



